ಭಾರತ್ ಬಂದ್: ದೇಶದ ಹಲವೆಡೆ ಪ್ರತಿಭಟನೆ, ದೆಹಲಿ ಗಡಿಗಳಲ್ಲಿ ಬಿಗಿ ಭದ್ರತೆ
ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ವೇಳೆ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಸಿಂಘು ಗಡಿ ಸೇರಿದಂತೆ ದೆಹಲಿಯ ಗಡಿ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಮೂರು ಗಡಿ ಪ್ರದೇಶಗಳಲ್ಲಿಯೂ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದ್ದು, ಪ್ರತಿಭಟನಾಕಾರರು ದೆಹಲಿ ಪ್ರವೇಶಿಸದಂತೆ ತಡೆಯಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ದೆಹಲಿ ಮೆಟ್ರೊದ ಕೆಲವು ನಿಲ್ದಾಣಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಲಾಗಿದೆ.
ಹರಿಯಾಣದ ಕುರುಕ್ಷೇತ್ರದಲ್ಲಿ ದೆಹಲಿ-ಅಮೃತಸರ ಹೆದ್ದಾರಿಯಲ್ಲಿ ಸಂಚಾರಕ್ಕೆ ತಡೆಯೊಡ್ಡಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಘಾಜಿಪುರ, ಸಿಂಘು ಗಡಿಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಪಂಜಾಬ್-ಹರಿಯಾಣ ಶಂಭು ಗಡಿಯನ್ನು ಮುಚ್ಚಲಾಗಿದೆ.