ಶಿಥಿಲಗೊಂಡಿರುವ ಎಲ್ಲಾ ಕಟ್ಟಡಗಳ ಮರು ಸಮೀಕ್ಷೆ ನಡೆಸಿ: 15 ದಿನಗಳಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಗೌರವ್ ಗುಪ್ತಾ ಸೂಚನೆ
ಬೆಂಗಳೂರಿನಲ್ಲಿ ಶಿಥಿಲಗೊಂಡಿರುವ ಎಲ್ಲಾ ಕಟ್ಟಡಗಳ ಮರು ಸಮೀಕ್ಷೆ ನಡೆಸುವಂತೆ ಬಿಬಿಎಂಪಿ ಸೂಚನೆ ನೀಡಿದೆ.
ಮುಂದಿನ 15 ದಿನಗಳಲ್ಲಿ ಸಮೀಕ್ಷೆ ನಡೆಸಿ ನಿಖರ ವರದಿ ನೀಡುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಸೂಚನೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಸಮೀಕ್ಷೆ ಮಾಡುವ ಸಂಬಂಧ ವರ್ಚುವಲ್ ಮಾಧ್ಯಮದಲ್ಲಿ ಎಲ್ಲಾ ವಲಯ ಆಯುಕ್ತರು ಮತ್ತು ಜಂಟಿ ಆಯುಕ್ತರ ಸಭೆ ನಡೆಸಿದರು. ನಗರದಲ್ಲಿ 2019ರಲ್ಲಿ ಸಮೀಕ್ಷೆಯಲ್ಲಿ ಗುರುತಿಸಿದ್ದ 185 ಶಿಥಿಲಾವಸ್ಥೆಯ ಕಟ್ಟಡಗಳ ಪೈಕಿ ಈಗಾಗಲೇ 10 ಕಟ್ಟಡಗಳನ್ನು ನೆಲಸಮ ಮಾಡಿದ್ದು, ಬಾಕಿ 175 ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡಬೇಕು. ಜೊತೆಗೆ ಆಯಾ ವಲಯಗಳಲ್ಲಿ ಸಂಬಂಧಪಟ್ಟ ಎಂಜಿನಿಯರ್ ಗಳು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಸ್ಥಳಕ್ಕೆ ಭೇಟಿ ನೀಡಿ ಮರು ಪರಿಶೀಲಿಸಬೇಕು. ಬಳಿಕ ಆ ಕಟ್ಟಡಗಳನ್ನು ನೆಲಸಮ ಮಾಡುವ ಸಲುವಾಗಿ ವಲಯವಾರು ಗುತ್ತಿಗೆದಾರರನ್ನು ನೇಮಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 2019ರಲ್ಲಿ ನಡೆಸಿರುವ ಸಮೀಕ್ಷೆ ಸರಿಯಾಗಿದ್ದರೆ, ಅದನ್ನೇ ಅನುಸರಿಸುತ್ತೇವೆ. ಇಲ್ಲದಿದ್ದರೆ ಹೊಸದಾಗಿ ಸಮೀಕ್ಷೆ ಮಾಡಿಸಿ ಕ್ರಮ ಕೈಗೊಳ್ಳುತ್ತೇವೆ. ಸಮೀಕ್ಷೆಗೆ ವಲಯಗಳ ಆಯುಕ್ತರು, ಜಂಟಿ ಆಯುಕ್ತರ ನೇತೃತ್ವದಲ್ಲಿ ವಿವಿಧ ವಿಭಾಗಗಳ ಅಧಿಕಾರಿಗಳ ತಂಡ ರಚಿಸಲಾಗುವುದು, ಇನ್ನೆರಡು ದಿನಗಳಲ್ಲಿ ನಡೆಯುವ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳುತ್ತೇವೆಂದು ಹೇಳಿದರು.