Karnataka Rains Today ಬೆಂಗಳೂರು(ಅ.08): ರಾಜ್ಯದಲ್ಲಿ ಮಳೆಯ(Heavy Rainfall) ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಅಕ್ಟೋಬರ್ 6 ಕ್ಕೆ ಮುಂಗಾರು(Monsoon) ಅಂತ್ಯವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಇನ್ನೂ ಅಕ್ಟೋಬರ್ 10ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅಕ್ಟೋಬರ್ 10ರ ತನಕ ಮಳೆ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದೆ. ನೈರುತ್ಯ ಬಂಗಾಳ ಕೊಲ್ಲಿಯಿಂದ ಪೂರ್ವ ಮಧ್ಯ ಅರೇಬಿಯನ್ ಸಮುದ್ರದವರೆಗೆ ಹಾಗೂ ತಮಿಳುನಾಡು ಮತ್ತು ಕರ್ನಾಟಕದಾದ್ಯಂತ ಒಂದು ಮುಂಗಾರು ತೊಟ್ಟಿ ವಿಸ್ತರಿಸಿದ್ದು, ಇದು ರಾಜ್ಯದಲ್ಲಿ ಮಳೆಗೆ ಕಾರಣವಾಗಿದೆ.
ಶುಕ್ರವಾರ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿಸಹ ಹೆಚ್ಚಿನ ಮಳೆ ನಿರೀಕ್ಷೆ ಇದೆ.