ರಾಜ್ಯ

ಕೊಡಗು: ಗುರುವಾರ ಬೆಳಗ್ಗೆ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ


ಮಡಿಕೇರಿ : ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ತುಲಾ ಸಂಕ್ರಮಣ ಮತ್ತು ಕಾವೇರಿ ತೀರ್ಥೋದ್ಭವ-2024ಕ್ಕೆ ತಯಾರಿ ನಡೆದಿದೆ. ಅಕ್ಟೋಬರ್ 17ರ ಗುರುವಾರ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ನಡೆಯಲಿದ್ದು, ಇದನ್ನು ವೀಕ್ಷಿಸಲು ಸಾವಿರಾರು ಭಕ್ತರು ಆಗಮಿಸಲಿದ್ದಾರೆ.

ಕೊಡಗು ಜಿಲ್ಲಾಡಳಿತ ತಲಕಾವೇರಿಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಭಕ್ತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡಿದೆ. ನಾಡಿನ ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ನಡೆಯುವ ತುಲಾ ಸಂಕ್ರಮಣ ಮತ್ತು ಕಾವೇರಿ ತೀರ್ಥೋದ್ಭವಕ್ಕೆ ಕರ್ನಾಟಕ ಮಾತ್ರವಲ್ಲ ವಿವಿಧ ಜಿಲ್ಲೆ ಮತ್ತು ರಾಜ್ಯಗಳಿಂದ ಭಕ್ತರು ಆಗಮಿಸುತ್ತಾರೆ. ಈ ಬಾರಿ ಹಗಲು ಹೊತ್ತಿನಲ್ಲಿ ಕಾವೇರಿ ತೀರ್ಥೋದ್ಭವವಾಗಲಿದ್ದು, ಸಾವಿರಾರು ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆ ಇದೆ.

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಗುರುವಾರ ಬೆಳಗ್ಗೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ನೆರವೇರಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿದೆ.

ದೇವಾಲಯಕ್ಕೆ ಗುರುವಾರ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ. ಎಸ್. ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಡಾ. ಮಂತರ್ ಗೌಡ ಮುಂತಾದವರು ಆಗಮಿಸಲಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button