ಮಕ್ಕಳ ಸ್ನೇಹಿ ಪರಿಸರ ರೂಪಿಸುವುದು ಪ್ರತಿಯೊಬ್ಬರ ಜವಾಬ್ದಾರಿ : ವೆಂಕಟೇಶ್

ಚಾಮರಾಜನಗರ, ಡಿ.16:- ಪ್ರತಿ ಮಗುವನ್ನು ಮಕ್ಕಳ ಸ್ನೇಹಿ ಪರಿಸರದಲ್ಲಿ ಬೆಳೆಸಿದಾಗ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಅವರು ತಿಳಿಸಿದರು.
ನಗರದ ಹಳೇ ಕೆಡಿಪಿ ಸಭಾಂಗಣದಲ್ಲಿಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ ಎಂಬ ಶೀರ್ಷಿಕೆಯಡಿ ಆರ್.ಟಿ.ಇ ಕಾಯ್ದೆಯ ಅನುಷ್ಟಾನ ಹಾಗೂ ಮಕ್ಕಳೊಂದಿಗೆ ಸಂವಾದ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ’ ವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳನ್ನು ಉತ್ತಮ ವಾತಾವರಣದಲ್ಲಿ ಬೆಳೆಸಬೇಕು. ಆಗ ಮಾತ್ರ ಸಢೃಡ ಸಮಾಜ ನಿರ್ಮಾಣವಾಗಲು ಸಾಧ್ಯವಾಗಲಿದೆ.

ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಶಾಲೆಯಲ್ಲಿ ಶಿಕ್ಷಣದ ಜೊತೆಗೆ ರಕ್ಷಣೆ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಸರ್ಕಾರದ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜೊತೆಗೂಡಿ ರಾಜ್ಯಾದ್ಯಂತ ಆರ್.ಟಿ.ಇ ಕಾಯ್ದೆ ಅನುಷ್ಟಾನದ ಬಗ್ಗೆ ಸಂವಾದ, ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಆರ್.ಟಿ.ಇ ಕಾಯ್ದೆಯು ಮಕ್ಕಳ ಪ್ರತಿಭೆಗಳನ್ನು ಹೊರ ತರಲು ಅನೇಕ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ಕಲ್ಪಿಸಿದೆ.
ಸಂವಿಧಾನದದಲ್ಲಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕನ್ನು ನೀಡಿದೆ. ವಿಶ್ವಸಂಸ್ಥೆಯಲ್ಲಿ ಮಕ್ಕಳ ಹಕ್ಕುಗಳ ಒಡಂಬಡಿಕೆ ಅಂಗೀಕಾರವಾದ ನಂತರ ದೇಶದಲ್ಲಿ ಮಕ್ಕಳ ಹಕ್ಕು ಕಾಯ್ದೆಗಳಿಗೆ ತಿದ್ದುಪಡಿ ತರಲಾಗಿದೆ. ಅದರಲ್ಲಿ ಬಹಳ ಮುಖ್ಯವಾದದ್ದು ಬಾಲ ನ್ಯಾಯ ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಎಂದು ತಿಳಿಸಿದರು.
ಶಾಲೆಯಲ್ಲಿ ಶಿಕ್ಷಣದ ಜೊತೆ ರಕ್ಷಣೆ ಕುರಿತು ಮೊದಲ ಬಾರಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಕ್ಕಳೊಂದಿಗೆ ಸಂವಾದ ನಡೆಸಿ ಮಕ್ಕಳ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುತ್ತದೆ. ಈ ಸಂವಾದದಲ್ಲಿ ಮಕ್ಕಳ ಪ್ರಶ್ನೆಗಳನ್ನು ಆಧರಿಸಿ ಆಯೋಗದ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ಮಕ್ಕಳೊಂದಿಗೆ ಸಂವಾದ ನಡೆಯಿತು. ಮಕ್ಕಳು ಕೇಳಿದ ಪ್ರಶ್ನೆಗಳಿಗೆ ಜಿಲ್ಲಾಮಟ್ಟದ ಅಧಿಕಾರಿಗಳು ಉತ್ತರಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಂಜುನಾಥ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪನಿರ್ದೇಶಕರ ರಾಮಚಂದ್ರರಾಜೇ ಅರಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ. ಸವಿತಾ, ತಾಲೂಕು ವೈದ್ಯಾಧಿಕಾರಿ ಡಾ. ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ, ಬಾಲನ್ಯಾಯ ಮಂಡಳಿ ಸದಸ್ಯರಾದ ಸರಸ್ವತಿ, ಗಂಗಾಧರ್ ಸೇರಿದಂತೆ ಇತರರಿದ್ದರು.
ವರದಿ : ಇರಸವಾಡಿ ಸಿದ್ದಪ್ಪಾಜಿ, tv8newskannada ಚಾಮರಾಜನಗರ