ಬೆಂಗಳೂರು: ಬೆಂಗಳೂರು ಸೇರಿದಂತೆ ಮೈಸೂರು ಭಾಗದಲ್ಲಿ ಮಳೆಯಾಗುವ (Bengaluru Rainfall) ಸಾಧ್ಯತೆಗಳಿವೆ. ಕರಾವಳಿ ಮತ್ತು ಒಳನಾಡಿನಲ್ಲಿ ಮಳೆಯ ಸಣ್ಣ ಸಿಂಚನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು (Bengaluru Weather) ಗರಿಷ್ಠ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನು ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಮಳೆಯಾಗುವ (Uttara Kannada, Dakshina Kannada And Udupi) ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಇಂದು ಸಹ ಮೋಡ ಮತ್ತು ಸೂರ್ಯನ ನಡುವೆ ಈ ಆಟ ನಡೆಯಲಿದೆ.

ನವೆಂಬರ್ 5ರಂದು ಆರೆಂಜ್ ಅಲರ್ಟ್
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನವೆಂಬರ್ 5ರಂದು ಭಾರೀ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ದಾವಣಗೆರೆ, ಚಿತ್ರದುರ್ಗ ಮತ್ತು ಕೊಡಗು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ.
ಉಡುಪಿ, ಮಂಗಳೂರು ಮತ್ತು ಉತ್ತರ ಕನ್ನಡ ಕರಾವಳಿ ಭಾಗದಲ್ಲಿ ಮಳೆಯಾಗುತ್ತಿದೆ ಹಾಗಾಗಿ ಸಮುದ್ರ ತೀರದ ಮತ್ತು ಮೀನುಗಾರರಿಗೆ ಎಚ್ಚರಿಕೆಯ ಸಂದೇಶ ನೀಡಲಾಗಿದೆ. ಸಮುದ್ರ ತೀರದಲ್ಲಿಯೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.