ತಮಿಳುನಾಡಿನ (Tamil Nadu Rains) ಚೆನ್ನೈ ಸೇರಿದಂತೆ ವಿವಿಧ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದಾಗಿ ಅನೇಕ ಪ್ರದೇಶದಲ್ಲಿ ನೀರು ನಿಂತಿದ್ದು, ಪ್ರವಾಹದ (Flood in Chennai) ಸ್ಥಿತಿ ಉಂಟಾಗಿದೆ. ನಿರಂತರ ಮಳೆಯಿಂದಾಗಿ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪಟ್ಟು, ವಿಲ್ಲುಪುರಂ, ಕಡಲೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ರಕ್ಷಣಾ ಕಾರ್ಯಕ್ಕಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ರಾಜ್ಯಕ್ಕೆ ಆಗಮಿಸಿದೆ.
ಈಶಾನ್ಯ ಮಾನ್ಸೂನ್ನಿಂದಾಗಿ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಶಾಲೆಗಳಿಗೆ ರಜೆ ನೀಡುವಂತೆ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಆಯಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದ್ದಾರೆ.
ತಮಿಳುನಾಡಿನ ಉತ್ತರ ಕರಾವಳಿಯ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈ ಮತ್ತು ಇತರ ಮೂರು ಜಿಲ್ಲೆಗಳಲ್ಲಿ ಬಹುತೇಕ ಸರ್ಕಾರಿ ಕಚೇರಿಗಳು ಕೂಡ ಬಂದ್ ಆಗಿದೆ. ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಿಸಿ ಅಥವಾ ನೌಕರರು ಮನೆಯಿಂದಲೇ ಕೆಲಸ ಮಾಡಲು ಅವಕಾಶ ಮಾಡಿಕೊಡುವಂತೆ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮನವಿ ಮಾಡಿದ್ದಾರೆ